ರಾಜ್ಯದಲ್ಲಿ ಮುಂದಿನ 5 ದಿನಗಳವರೆಗೆ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಶ್ಚಿಮಘಟ್ಟ ಪ್ರದೇಶ ವ್ಯಾಪ್ತಿಯಲ್ಲಿ ವರ್ಷಧಾರೆ ಅಬ್ಬರ ಜೋರಾಗಿದೆ. ನದಿಗಳ ನೀರಿನ ಹರಿವು ಏರಿಕೆಯಾಗುತ್ತಿದೆ. ಇದರಿಂದ ಪ್ರಮುಖ ಡ್ಯಾಂಗಳ ಒಳಹರಿವಿನಲ್ಲಿ ಭಾರೀ ಹೆಚ್ಚಳ ಕಂಡು ಬಂದಿದೆ.
ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಕೊಡಗಿನಲ್ಲಿ ಭೂಕುಸಿತದ ಭೀತಿ ಉಂಟಾಗಿದ್ದರೆ ಕರಾವಳಿ ಮಲೆನಾಡು ಪ್ರದೇಶದಲ್ಲಿ ಹಳ್ಳ ಕೊಳ್ಳ ತುಂಬಿ ಹರಿದು ಜನಜೀವನ ಅಸ್ಥವ್ಯಸ್ಥಗೊಂಡಿದೆ. ಮಳೆಯು ಇನ್ನು 5 ದಿನಗಳ ಕಾಲ ಮುಂದುವರೆಯಲಿದೆ ಎಂದು ಮುನ್ಸೂಚನೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 16 ರಿಂದ ಜುಲೈ 20ರವರೆಗೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಿಸಿದೆ. ಈ ವೇಳೆ 115 ಮಿಮೀನಿಂದ 204 ಮಿಮೀವರೆಗೆ ಮಳೆಯಾಗುವ ಸಾಧ್ಯತೆಯಿದೆ. ಕಾಳಿ ನದಿಗೆ ನೀರಿನ ಒಳಹರಿವು ಹೆಚ್ಚಾಗಿದ್ದು, ಮೂರು ಗೇಟ್ ಗಳ ಮೂಲಕ ನೀರನ್ನು ಹೊರ ಬಿಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ದಾವಣಗೆರೆ, ಚಾಮರಾಮನಗರ, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರಿನಲ್ಲಿ 17 ರಂದು ಯೆಲ್ಲೋ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ:
ಕರಾವಳಿ ಪ್ರದೇಶದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿ ಕಟ್ಟೆಚ್ಚರ ವಹಿಸುವಂತೆ ಕರಾವಳಿ ಪ್ರದೇಶದ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡದ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶಗಳಿಂದ ಹರಿದು ಬರುವ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಭಾರೀ ಹೆಚ್ಚಳವಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಇದೇ ರೀತಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಏಳುವ ಗಾಳಿಯಿಂದ ಅಲೆಗಳ ಹೊಡೆತ ಇನ್ನಷ್ಟು ಹೆಚ್ಚಲಿದ್ದು, ಕಡಲ ಕೊರೆತ ಉಂಟಾಗುವ ಸಾಧ್ಯತೆ ಇದೆ. ಗೋಕರ್ಣದ ಆತ್ಮಲಿಂಗಕ್ಕೆ ನೀರು ನುಗ್ಗಿ 2 ಗಂಟೆಕಾಲ ಪೂಜೆ ಸ್ಥಗಿತಗೊಳಿಸಬೇಕಾಯಿತು. ಕೊಡಗಿನಲ್ಲಿ ಭಾರಿ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಮಡಿಕೇರಿ ಜಿಲ್ಲಾಡಳಿತ ಕಚೇರಿ ಬಳಿ ಮಣ್ಣು ಕುಸಿತ ಉಂಟಾಗಿದೆ.
Share your comments