ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 16ರಿಂದ 20ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಐದೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಹಾಗೂ ಗರಿಷ್ಠ 3.4 ಮೀಟರ್ ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.
ಈಗಾಗಲೇ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಮಂಗಳವಾರ ರಾತ್ರಿಯಿಂದ ಬುಧವಾರ ಇಡೀ ದಿನ ಕಲಬುರಗಿ ಬೀದರ್ ಜಿಲ್ಲೆ ಸೇರಿದಂತೆ ಇತರೆಡೆ ಧಾರಾಕಾರ ಮಳೆ ಸುರಿಯಿತು.
Share your comments