ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರ್ಕಾರ 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ.
ಪ್ರಥಮ ಮತ್ತು ದ್ವಿತೀಯ ವರ್ಷದ ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಪರೀಕ್ಷೆಗಳನ್ನು ರದ್ದು ಮಾಡಿ ಅಂತಿಮ ವರ್ಷದ ಪರೀಕ್ಷೆಯನ್ನು ಮಾತ್ರವೇ ನಡೆಸಲು ತೀರ್ಮಾನಿಸಿದೆ.
2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳೊಂದಿಗೆ ನಿರಂತರ ಸಮಾಲೋಚನೆ ನಡೆಸಿ ಸಾಧಕ-ಬಾಧಕಗಳನ್ನು ಪರಿಗಣಿಸಿ ವಿದ್ಯಾರ್ಥಿಗಳ ಅರೋಗ್ಯ ಹಾಗೂ ಅವರ ಮುಂದಿನ ಭವಿಷ್ಯದ ದೃಷ್ಟಿಯಿಂದ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ, ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು.
ಅವರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ತಿಳಿಸಿದರು.
ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಅಂಕ:
ಮಧ್ಯಂತರ ಸೆಮಿಸ್ಟರ್/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾ ರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುವುದು. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು. ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು.ಬ್ಯಾಕ್‌ಲಾಗ್ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದರು.
ಸೆಪ್ಟೆಂಬರ್ 1ರಿಂದ ಆನ್‌ಲೈನ್ ತರಗತಿ:
2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭ ವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದರು.
Share your comments