ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯೆಲ್ಲೋ ಅಲರ್ಟ್ ಘೋಷಣೆ: ಇನ್ನು ರಾಜ್ಯದ ಹಲವು ಭಾಗದಲ್ಲಿ ಮೇ8ರಿಂದ ಮೇ 10ರ ವರೆಗೆ ಭಾರೀ ಮಳೆ ಆಗುವ ಸಾಧ್ಯತೆ
ಇರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ8ಕ್ಕೆ ಶಿವಮೊಗ್ಗ, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ, ಮೇ9ಕ್ಕೆ ಮೈಸೂರು ಹಾಗೂ ಚಾಮರಾಜನಗರ,
ಮೇ10ಕ್ಕೆ ಮೈಸೂರು ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅಲ್ಲದೇ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಗದಗ, ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ
ಹಾಗೂ ಬಾಗಲಕೋಟೆಯಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮಳೆ ಸೆಂ.ಮೀ ಪ್ರಮಾಣದಲ್ಲಿ ಬೀದರ್ ಪಿಟಿಒನಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ.
ಹುಮನಾಬಾದ್, ಟಮಕ ಕೆವಿಕೆಯಲ್ಲಿ ತಲಾ 4 ಸೆಂ.ಮೀ, ನಿಂಬರ್ಗಾ ತಾಂಡಾದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
ಕಮಲಾಪುರ, ಸುಲೇಪೇಟೆ, ಹಲಬರ್ಗಾ, ತಿಪಟೂರು, ಮಿಡಗೇಶಿ ಕಾಟಿಕೆರೆ, ಹೊಳೆಹೊನ್ನೂರು ಹಾಗೂ ಶ್ರೀರಂಗಪಟ್ಟ
ವ್ಯಾಪ್ತಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳು: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಬೀದರ್,
ಕಲಬುರಗಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಕರಾವಳಿ ಮತ್ತು ಉತ್ತರ
ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ರಾಜ್ಯದ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ.
ಇನ್ನು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು,
ಸಂಜೆ ಅಥವಾ ರಾತ್ರಿ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Pic Credits: Pexels
Share your comments